ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಮೇಲಿನ ತಾರತಮ್ಯ ನಿರಂತರವಾಗಿದೆ: ಮುಕೇಶ್ ಸಹಾನಿ

WhatsApp
Telegram
Facebook
Twitter
LinkedIn

ಬೆಂಗಳೂರು: ದೇಶದಲ್ಲಿ ಒಂದು ಸಂವಿಧಾನ ಮತ್ತು ಒಬ್ಬರೇ ಪ್ರಧಾನ ಮಂತ್ರಿ ಇದ್ದರೂ, ಅಲ್ಪಸಂಖ್ಯಾತ ಸಮುದಾಯ ಹಾಗೂ ವಿವಿಧ ಹಿಂದುಳಿದ ವರ್ಗಗಳ ಮೇಲೆ ತಾರತಮ್ಯ ನಿರಂತರವಾಗಿ ನಡೆಯುತ್ತಿದೆ ಎಂದು ಬಿಹಾರದ ಮಾಜಿ ಸಚಿವ ಹಾಗೂ ವಿಕಾಸಶೀಲ ಇನ್ಸಾನ್ ಪಾರ್ಟಿಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಮುಕೇಶ್ ಸಹಾನಿ ಆರೋಪಿಸಿದರು.

ಸೋಮವಾರ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ​ದೇಶದ ವಿವಿಧ ರಾಜ್ಯಗಳಲ್ಲಿ ಮೀಸಲಾತಿ ವರ್ಗೀಕರಣದಲ್ಲಿ ಅಸಮಾನತೆ ಇದ್ದು, ಮಲ್ಲಾಹ್ ಮತ್ತು ಮೀನುಗಾರ ಸಮುದಾಯಗಳಡಿ ಸೇರ್ಪಡೆಯಾಗಿರುವ ಜನರಿಗೆ ದೇಶಾದ್ಯಂತ ಏಕರೂಪದ ಮೀಸಲಾತಿ ಸ್ಥಾನಮಾನ ಸಿಗಬೇಕು. ಹಿಂದುಳಿದ ಹಾಗೂ ತುಳಿತಕ್ಕೊಳಗಾದ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ರಾಜಕೀಯ ಮತ್ತು ಸಾಮಾಜಿಕ ನ್ಯಾಯ ಸಿಗುವಂತಾಗಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ಒಗ್ಗೂಡಿ ಹೋರಾಡಬೇಕಿದೆ ಎಂದರು.

​ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಗಳು ಮತ್ತು ಸಿದ್ಧಾಂತಗಳ ಹಾದಿಯಲ್ಲಿ ಸಾಗುವ ಮೂಲಕ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು ಹಾಗೂ ನ್ಯಾಯ ದೊರೆಯುವಂತೆ ಮಾಡುವುದು ನಮ್ಮ ಪಕ್ಷದ ಮುಖ್ಯ ಗುರಿಯಾಗಿದೆ. ಪ್ರಸ್ತುತ ರಾಜಕೀಯ ಕ್ಷೇತ್ರದಲ್ಲಿ ವ್ಯಾಪಾರೀಕರಣ ಹೆಚ್ಚಾಗುತ್ತಿದ್ದು, ಇದರಿಂದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಜನರನ್ನು ರಾಜಕೀಯದಿಂದ ದೂರ ತಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸುಮಾರು ಎರಡೂವರೆ ತಿಂಗಳ ಹಿಂದೆ ಕರ್ನಾಟಕದಲ್ಲಿ ಅಧಿಕೃತವಾಗಿ ಕಾಲಿಟ್ಟ ನಮ್ಮ ಪಕ್ಷವನ್ನು ಬಲಪಡಿಸಲು ಮುಂದಾಗಿದ್ದೇವೆ. ರಾಜ್ಯ ಘಟಕದ ಅಧ್ಯಕ್ಷರು, ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರನ್ನೊಳಗೊಂಡ ಮುಖ್ಯ ತಂಡದೊಂದಿಗೆ ಸುದೀರ್ಘ ಚರ್ಚೆ ನಡೆಸಲಾಗುತ್ತಿದೆ. ಮುಂಬರುವ 2028ರ ಚುನಾವಣೆ ಹಾಗೂ ಭವಿಷ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಬಲವಾಗಿ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ವಿಕಾಸಶೀಲ ಇನ್ಸಾನ್ ಪಾರ್ಟಿಯ ಕರ್ನಾಟಕ ಘಟಕದ ಅಧ್ಯಕ್ಷ ಬಿ.ಕೆ. ಮೋಹನ್ ಕುಮಾರ್ ಮಾತನಾಡಿ, ​ಅಹಿಂಸೆ ಹಾಗೂ ಧರ್ಮದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಈ ಹಿಂದೆ ಆಡಳಿತ ನಡೆಸಿದವರೂ ಕೂಡ ಹಿಂದುಳಿದ ವರ್ಗಗಳ ಹಿತಾಸಕ್ತಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಜನರಿಗೆ ನೀಡಬೇಕಾದ ಸಾಮಾಜಿಕ ನ್ಯಾಯವನ್ನು ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿದರು.

​ಕರ್ನಾಟಕದಲ್ಲಿ ವಿಐಪಿ ಪಕ್ಷದ ಮುಖಂಡರು ನಿರಂತರವಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಇದಕ್ಕೆ ಒಬಿಸಿ ಹಾಗೂ ಹಿಂದುಳಿದ ವರ್ಗಗಳ ಜನರಿಂದ ಅಭೂತಪೂರ್ವ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈವರೆಗಿನ ಆಡಳಿತಗಾರರಿಂದ ವಂಚಿತರಾದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಏಕೈಕ ಉದ್ದೇಶದಿಂದ ನಮ್ಮ ಪಕ್ಷ ಶ್ರಮಿಸುತ್ತಿದೆ ಎಂದರು.

ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡಿ ಜನರ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ವಿಐಪಿ ಪಕ್ಷದ ಬದ್ಧತೆಗೆ ಜನಸಾಮಾನ್ಯರಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಸುನಾಮಿ ಮಾದರಿಯಲ್ಲಿ ಬೆಂಬಲ ಸಿಗಲಿದ್ದು, ಈಗಾಗಲೇ ಸಾವಿರಾರು ಕಾರ್ಯಕರ್ತರು ಹಾಗೂ ನಾಯಕರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹಿಂದುಳಿದ ಸಮುದಾಯಗಳ ಹಕ್ಕಿಗಾಗಿ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ವಿಐಪಿ ಪಕ್ಷದ ಹೋರಾಟ ಸತತವಾಗಿ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎ ಹೆಚ್, ಖಜಾಂಚಿ ರಾಮಂಜಿನಪ್ಪ ಬಿ ಕೆ, ರಾಜ್ಯ ಘಟಕದ ಉಪಾಧ್ಯಕ್ಷ ಆರ್ಯನ್ ವೈ, ಬೆಂಗಳೂರು ಘಟಕದ ಮಹಿಳಾ ಜಿಲ್ಲಾಧ್ಯಕ್ಷೆ ಸೋನಾಲಿ ಕೆ ಪುವಯ್ಯ ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಹಾಗೂ ಹಿರಿಯ ನಾಯಕರು ಉಪಸ್ಥಿತರಿದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon