ಬೆಂಗಳೂರು: ಕನ್ನಡ ಮಾಧ್ಯಮ ಹಾಗೂ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಕನ್ನಡಿಗರು ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೀರ್ತಿ ತಂದಿರುವುದಷ್ಟೇ ಅಲ್ಲದೆ, ಸಮಾಜದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣಕರ್ತರಾಗಿದ್ದಾರೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ, ಮಾಜಿ ಸಚಿವ ಡಾ.ಪಿ.ಜಿ.ಆರ್.ಸಿಂಧ್ಯಾ ಪ್ರತಿಪಾದಿಸಿದರು.
ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘದ ವತಿಯಿಂದ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿರುವ ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ನಾರಾಯಣ ಮೂರ್ತಿ ಮಂಡ್ಯದ ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲೇ ವ್ಯಾಸಂಗ ಮಾಡಿದವರಾಗಿದ್ದಾರೆ. ದೇಶದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು, ಸಮರ್ಥ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ದೇವರಾಜ ಅರಸು, ಎಸ್.ಎಂ. ಕೃಷ್ಣ ಹಾಗೂ ಮಹಾನ್ ವಿಜ್ಞಾನಿ ಸಿ.ಎನ್.ಆರ್. ರಾವ್ ಸೇರಿದಂತೆ ಅನೇಕ ಗಣ್ಯ ನಾಯಕರು ಕನ್ನಡ ಶಾಲೆಗಳಲ್ಲೇ ಓದಿ ಬೆಳೆದವರಾಗಿದ್ದಾರೆ ಎಂದು ನುಡಿದರು.
ಕರ್ನಾಟಕದ ಸ್ವಾತಂತ್ರ್ಯೋತ್ತರ ಅವಧಿಯ ದಶಕಗಳಲ್ಲಿ ರಾಷ್ಟ್ರ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರು ಅಹೋರಾತ್ರಿ ಶ್ರಮಿಸಿದ್ದಾರೆ. ಅವರೆಲ್ಲರ ಶ್ರಮದಿಂದಾಗಿ ಕರ್ನಾಟಕದ ಶಿಕ್ಷಣ ಕ್ಷೇತ್ರಕ್ಕೆ ಭಾರತದಲ್ಲಷ್ಟೇ ಅಲ್ಲದೆ ಜಾಗತಿಕ ಮಟ್ಟದಲ್ಲೂ ಅತ್ಯುನ್ನತ ಗೌರವ ಹಾಗೂ ಮನ್ನಣೆ ದೊರೆತಿದೆ. ಅಮೆರಿಕದ ಅಧ್ಯಕ್ಷರ ವೈದ್ಯರಾಗಿಯೂ ಇಲ್ಲಿ ಓದಿದ ಕನ್ನಡಿಗರೇ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ. ದೇಶದ ಸಾರ್ವಜನಿಕ ಕ್ಷೇತ್ರ ಹಾಗೂ ಸಮಾಜದ ವಿವಿಧ ರಂಗಗಳಲ್ಲಿ ಚಿರಾಸ್ಮರಣೀಯ ಕೆಲಸಗಳನ್ನು ಮಾಡಿರುವ ಇಲ್ಲಿನ ಸಾಧಕರು, ಲಕ್ಷಾಂತರ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ನಾಡಿನ ಪ್ರಗತಿಗೆ ಶ್ರಮಿಸಿದ್ದಾರೆ ಎಂದು ಶ್ಲಾಘಿಸಿದರು.
ಇತ್ತೀಚಿನ ದಿನಗಳಲ್ಲಿ ಗುಣಾತ್ಮಕ ಹಾಗೂ ಮೌಲ್ಯಾಧಾರಿತ ವಿಚಾರಗಳನ್ನು ಇಟ್ಟುಕೊಂಡು ಸಮಾಜದ ಬದಲಾವಣೆಗೆ ಶ್ರಮಿಸುವುದು ಮತ್ತು ಸಂಘಟನೆಗಳನ್ನು ಮುನ್ನಡೆಸುವುದು ಕಠಿಣವಾದ ಕೆಲಸವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘದ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳ ಶ್ರಮ ಶ್ಲಾಘನೀಯ. ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸಮಾಜಕ್ಕೆ ಕೊಡುಗೆ ನೀಡಲು ಭಗವಂತ ಇವರೆಲ್ಲರಿಗೂ ಸನ್ಮತಿ ಹಾಗೂ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ಕೃಷ್ಣಪ್ಪ, ಪದಾಧಿಕಾರಿಗಳಾದ ಕುಮಾರಸ್ವಾಮಿ, ಸಿ.ಎಸ್. ರೆಡ್ಡಿ ಸೇರಿದಂತೆ ಹಲವರು ಹಾಜರಿದ್ದರು















