ಖಾನಾಪುರ: ಸರ್ಕಾರದ ಪ್ರಜಾ ಸೇವಾ ಆಂದೋಲನದ ಉದ್ದೇಶವೇ ಜನರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಸರ್ಕಾರಿ ಸೌಲಭ್ಯಗಳು ಹಾಗೂ ಮೂಲಭೂತ ಸೇವೆಗಳು ಸಮರ್ಪಕವಾಗಿ ತಲುಪಿಸುವುದಾಗಿದೆ. ಆದರೆ ಜಾಂಬೋಟಿಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಜನರ ಸಮಸ್ಯೆಗಳ ಜೊತೆಗೆ ಅಧಿಕಾರಿಗಳ ಕಾರ್ಯವೈಖರಿಯೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಕಾರ್ಯಕ್ರಮಕ್ಕೆ ಖಾನಾಪುರ ತಹಸೀಲ್ದಾರ್ ದುಂಡಪ್ಪ ಕೋಮಾರ ಗೈರುಹಾಜರಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸುವ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಪ್ರಮುಖ ಅಧಿಕಾರಿ ಗೈರುಹಾಜರಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.
ಬಾಕ್ಸೈಟ್ ಗಣಿಗಾರಿಕೆಗೆ ಶಾಸಕ ಹಲಗೇಕರ್ ಖಡಕ್ ಎಚ್ಚರಿಕೆ!
ಸಭೆಯಲ್ಲಿ ಶಾಸಕ ವಿಠಲ್ ಹಲಗೇಕರ್ ಅವರು ಬಾಕ್ಸೈಟ್ ಗಣಿಗಾರಿಕೆ ವಿಚಾರವನ್ನು ಪ್ರಸ್ತಾಪಿಸಿ, ಅಕ್ರಮ ಗಣಿಗಾರಿಕೆ ನಡೆಯದಂತೆ ಸಂಬಂಧಪಟ್ಟ ಇಲಾಖೆಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಗಣಿಗಾರಿಕೆ ನಿಯಮ ಉಲ್ಲಂಘನೆಗಳ ಬಗ್ಗೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ತಾಕೀತು ಮಾಡಿದರು.
ಗ್ಯಾರಂಟಿ ಯೋಜನೆಗಳಲ್ಲಿ ಸಮಸ್ಯೆ- ರಾಜು ಕಾಂಬ್ಳೆ ಆಕ್ರೋಶ
ದಲಿತ ನಾಯಕ ರಾಜು ಕಾಂಬ್ಳೆ ಅವರು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ತೀವ್ರ ಆಕ್ರೋಶ ಹೊರಹಾಕಿದರು. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ಸಮರ್ಪಕವಾಗಿ ತಲುಪಬೇಕು. ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳನ್ನೂ ಪ್ರಸ್ತಾಪಿಸಿ, ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ದುಡ್ಡು ಕೊಟ್ಟರೆ ಮಾತ್ರ ಕೆಲಸವೇ?”-ವಿನಾಯಕ ಮುತ್ಕೇಕರ್ ಪ್ರಶ್ನೆ
ತಹಸೀಲ್ದಾರ್ ಕಚೇರಿಯ ಕಾರ್ಯವೈಖರಿ ಕುರಿತು ಮಾತನಾಡಿದ ವಿನಾಯಕ ಮುತ್ಕೇಕರ್, ಸಾರ್ವಜನಿಕರ ಕೆಲಸಗಳಿಗೆ ಸಂಬಂಧಿಸಿದಂತೆ ಹಣದ ಬೇಡಿಕೆ ಇದೆ ಎಂಬ ಆರೋಪಗಳನ್ನು ಪ್ರಸ್ತಾಪಿಸಿದರು. “ದುಡ್ಡು ಕೊಟ್ಟರೆ ಮಾತ್ರ ಕೆಲಸ ಮಾಡುತ್ತೀರಾ?” ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು, ಸಾಮಾನ್ಯ ಜನರಿಗೆ ಸರ್ಕಾರಿ ಕಚೇರಿಗಳಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.















