ಬೆಂಗಳೂರು: ಜೆ.ಪಿ. ಭವನದಲ್ಲಿ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್. ಡಿ . ದೇವೇಗೌಡ ಹಾಗು ಕರ್ನಾಟಕ ವಿಧಾನ ಪರಿಷತ್ ಶಾಸಕ, ಜೆಡಿಎಸ್ ಹಿರಿಯ ನಾಯಕ ಟಿ.ಎ. ಶರವಣ ಅವರು ಭಾಗವಹಿಸಿ, ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಟಿ.ಎ. ಶರವಣ ಅವರು, ಮಹರ್ಷಿ ವಾಲ್ಮೀಕಿ ಅವರು ರಚಿಸಿದ ಮಹಾಕಾವ್ಯ ರಾಮಾಯಣವು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಜೀವನ ಮೌಲ್ಯಗಳ ಪ್ರತೀಕವಾಗಿದೆ. ಸತ್ಯ, ಧರ್ಮ, ನ್ಯಾಯ, ತ್ಯಾಗ, ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯಂತಹ ಶ್ರೇಷ್ಠ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹರ್ಷಿ ವಾಲ್ಮೀಕಿ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.
ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಆದರ್ಶಗಳು ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಹಾಗೂ ಸೌಹಾರ್ದತೆಯನ್ನು ಬೆಳೆಸಲು ಪ್ರೇರಣೆ ನೀಡುತ್ತವೆ. ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳು ಮುಂದಿನ ಪೀಳಿಗೆಗೂ ಸ್ಫೂರ್ತಿಯಾಗಬೇಕು ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗು ವಿಧಾನಸಭಾ ಉಪಸಭಾಧ್ಯಕ್ಷ ಜೆ.ಕೆ. ಕೃಷ್ಣಾ ರೆಡ್ಡಿ, ಮಾಜಿ ಶಾಸಕರಾದ ಶ್ರೀ ವೆಂಕಟರಾವ್ ನಾಡಗೌಡ ಹಾಗೂ ಬೆಂಗಳೂರು ನಗರ ಕೇಂದ್ರ ವಿಭಾಗದ ಅಧ್ಯಕ್ಷರಾದ ಶ್ರೀ ಆರ್. ಪ್ರಕಾಶ್, ಜೆಡಿಎಸ್ ಜಿಬಿಎ ಕಾರ್ಯಾಧ್ಯಕ್ಷ ಟಿ.ಆರ್. ತುಳಸಿರಾಮ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ಮಹರ್ಷಿ ವಾಲ್ಮೀಕಿ ಅವರಿಗೆ ಗೌರವ ಸಲ್ಲಿಸಿದರು.
ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು ಸಮಾಜದಲ್ಲಿ ಸದಾ ಜೀವಂತವಾಗಿರಲಿ; ಅವರ ಚಿಂತನೆಗಳು ಪ್ರತಿಯೊಬ್ಬರ ಬದುಕಿಗೂ ಮಾರ್ಗದರ್ಶನವಾಗಲಿ ಎಂಬ ಆಶಯದೊಂದಿಗೆ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.














