ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ರಾಜ್ಯಾದ್ಯಂತ ಪ್ರಾರಂಭ

WhatsApp
Telegram
Facebook
Twitter
LinkedIn

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ರಾಜ್ಯಾದ್ಯಂತ ಶನಿವಾರ ಪ್ರಾರಂಭವಾಗಲಿದ್ದು, ಮೊದಲ ದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವೆಬ್ ಕಾಸ್ಟಿಂಗ್ ಮುಖಾಂತರ ಪರೀಕ್ಷೆಯನ್ನು ವೀಕ್ಷಿಸಲಾಗುತ್ತದೆ.

ಒಟ್ಟು 7,46,801 ಹೊಸಬರು, 50,540 ಪುನಾವರ್ತಿತ ಮತ್ತು 13,022 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 5,174 ಶಾಲೆ, ಕಾಲೇಜುಗಳಲ್ಲಿ 1,217 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಜತೆಗೆ ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದ್ದು, ಆಯಾ ಜಿಲ್ಲೆಗಳ ಎಸ್‌ಪಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮುಂಜಾಗೃತಾ ಕ್ರಮ ವಹಿಸಲಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ.

ಉಚಿತ ಸಾರಿಗೆ ಸೌಲಭ್ಯ:

ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಪರೀಕ್ಷಾ ಕೇಂದ್ರಗಳನ್ನು ತಲುಪುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಹಾಲ್ ಟಿಕೆಟ್ ಅನ್ನು ತೋರಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಹೀಗಿರಲಿದೆ ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆ:

ರಾಜ್ಯಾದ್ಯಂತ ಫೆ. 28 ರಿಂದ ದ್ವಿತೀಯ ಪಿಯುಸಿ ಮತ್ತು ಏ.2ರವರೆಗೆ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಿ, ಪರೀಕ್ಷಾ ಕೇಂದ್ರಗಳ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸೆಕ್ಷನ್ 163 ಬಿಎನ್‌ಎಸ್‌ಎಸ್ ಜಾರಿಗೊಳಿಸಿ, 200 ಮೀ. ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಯಾರೂ ಸೇರದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಮಹಾನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಣ ಸಚಿವರ ಅಭಯ:

ಪರೀಕ್ಷೆ ಬರೆಯುವಾಗ ಮಕ್ಕಳಿಗೆ ಯಾವುದೇ ರೀತಿಯಲ್ಲಿ ಭಯಪಡದೆ ಧೈರ್ಯದಿಂದ ಪರೀಕ್ಷೆಗಳನ್ನು ಎದುರಿಸಿ. ಸಾಮಾಜಿಕ ಜಾಲತಾಣಗಳಲ್ಲಿ ಬಂದ ವದಂತಿಗಳಿಗೆ ಕಿವಿಗೊಡಬೇಡಿ. ಸುಳ್ಳು ಸುದ್ದಿಗಳನ್ನು ಹರಡುವವರಿಗೆ ಇಲಾಖೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಿದೆ. ಮಕ್ಕಳಿಗೆ ತೊಂದರೆಯಾಗದಂತೆ ಸೇವೆ ಮಾಡಲು ಇಲಾಖೆ ಸದಾ ಸಿದ್ಧವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon