ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ: ಸಿಎಂ ಸಿದ್ದರಾಮಯ್ಯ

WhatsApp
Telegram
Facebook
Twitter
LinkedIn

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಗುರುವಾರ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಜರುಗಿತು. ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ ಎಂದು ಹೇಳಿದರು.

ಕುಡಿಯುವ ನೀರಿಗೆ ಜಿಲ್ಲಾಧಿಕಾರಿಗಳೇ ಹೊಣೆ:

ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಹೆಚ್ಚಿನ ಬಿಸಿಗಾಳಿ ದಿನಗಳು:

ಈ ಬಾರಿ ಎಪ್ರಿಲ್-ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡು ಬರುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಯಾವ ರೀತಿಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಬೇಕು ಎಂದರು.

ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ:

ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನವನ್ನು ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.

598 ಗ್ರಾಮ ಪಂಚಾಯತ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ:

ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ 213 ತಾಲೂಕುಗಳನ್ನು ಹಾಗೂ 2410 ಗ್ರಾಮ ಪಂಚಾಯತ್ ಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 585 ಖಾಸಗಿ ಬೋರ್ವೆಲ್ ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 515 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದರು.

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಗುರುತು:

ಕಲಬುರಗಿ ಜಿಲ್ಲೆಯ 147 ಗ್ರಾಮ ಪಂಚಾಯತ್, ಬಾಗಲಕೋಟೆ 114, ಬೆಳಗಾವಿಯ 127, ಚಿಕ್ಕಮಗಳೂರಿನ 115, ಹಾವೇರಿಯ 138, ಮಂಡ್ಯ 130, ತುಮಕೂರಿನ 141 ಹಾಗೂ ಉತ್ತರಕನ್ನಡ ಜಿಲ್ಲೆಯ 125 ಗ್ರಾಮ ಪಂಚಾಯತ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ಗುರುತಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

22 ಕೊಳವೆ ಬಾವಿಗಳು ಬಾಡಿಗೆಗೆ:

ಪ್ರಸ್ತುತ 27 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, 95 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರುತಿಸಲಾಗಿದೆ. ಒಟ್ಟು 145 ವಾರ್ಡ್ ಗಳಲ್ಲಿ 57 ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ಬಾಡಿಗೆಗೆ 22 ಕೊಳವೆ ಬಾವಿಗಳನ್ನು ಪಡೆಯಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಬಹುದು:

ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು. ಖಾಸಗಿ ಬೋರ್ವೆಲ್ ಗಳನ್ನು ಬಾಡಿಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಬಹುದಾಗಿದೆ. ಇನ್ನು ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿ.ಎಂ.ಸಿ ನೀರು ಲಭ್ಯವಿದ್ದು, ಇದು ಒಟ್ಟು ಸಾಮರ್ಥ್ಯದ ಶೇ.36ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿ.ಎಂ.ಸಿ ನೀರು ಲಭ್ಯವಿತ್ತು. ಪ್ರಸುತ ಕುಡಿಯುವ ನೀರಿಗೆ ಸಾಕಷ್ಟು ನೀರು ಜಲಾಶಯಗಳಲ್ಲಿ ಲಭ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಿ:

ಮಳೆಗಾಲ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿರುವುದರಿಂದ ಜುಲೈ ಮಧ್ಯದವರೆಗೂ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು.  ನೀರಾವರಿಗಿಂತ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲಾಶಯಗಳಲ್ಲಿ ನೀರಿನ ಸೋರಿಕೆಯನ್ನು ಗುರುತಿಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು:

ಕುಡಿಯುವ ನೀರಿನ ಕುರಿತಾಗಿ ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು. ಇದಕ್ಕಾಗಿ ತಾಲೂಕು ಹಾಗೂ ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. ಜಿಲ್ಲಾ ಮಟ್ಟದ ಕಾರ್ಯಪಡೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ಎಲ್ಲಾ ಆರ್. ಒ ಘಟಕಗಳು 24/7 ನಿರಂತರ ವಿದ್ಯುತ್ ಸರಬರಾಜಿನೊಂದಿಗೆ ಕಾರ್ಯ ನಿರ್ವಹಿಸುವುದನ್ನು ಖಾತ್ರಿಪಡಿಸಬೇಕು. ಆರ್ ಒ ಘಟಕಗಳ ತಕ್ಷಣದ ದುರಸ್ತಿ ಮತ್ತು ಕುಡಿಯುವ ನೀರಿನ ಪೂರೈಕೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ತಾಲೂಕು ಮಟ್ಟದಲ್ಲಿ ತಂಡಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ರೈತರಿಗೆ ಸೂಕ್ತ ಸಮಯದಲ್ಲಿ ರಸಗೊಬ್ಬರ ಲಭ್ಯತೆಯನ್ನು ಖಾತ್ರಿಪಡಿಸಿ:

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಈ ಬಾರಿ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ವ್ಯಾಪಾರಿಗಳು ರಸಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿ ದಾಸ್ತಾನು ಇರಿಸುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಸೂಕ್ತ ಸಮಯದಲ್ಲಿ ರಸಗೊಬ್ಬರ ಲಭ್ಯತೆಯನ್ನು ಖಾತ್ರಿಪಡಿಸಲು ಕ್ರಮ ಕೈಗೊಳ್ಳಬೇಕು. ಯೂರಿಯಾ, ಡಿಎಪಿ ಸರಿಯಾಗಿ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ರಸಗೊಬ್ಬರ ಸಾಗಾಟ ಮಾಡುವುದನ್ನು ನಿಯಂತ್ರಿಸಬೇಕು. ಇದಕ್ಕಾಗಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಮೇವಿನ ಕೊರತೆ ಸಧ್ಯಕ್ಕೆ ಇಲ್ಲ:

ಕಳೆದ ಎರಡು ವರ್ಷಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಮೇವಿನ ಕೊರತೆ ಸಧ್ಯಕ್ಕೆ ಇರುವುದಿಲ್ಲ. ಆದರೆ ಈ ಕುರಿತು ನಿರ್ಲಕ್ಷ್ಯ ವಹಿಸದೆ ಮೇವಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ಕುರಿತಾದ ಟಾಸ್ಕ್‌ ಪೋರ್ಸ್‌ ಸಭೆ ನಡೆಸಿ ವರದಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮ ವಹಿಸಿ:

ಕಲುಷಿತ ನೀರು ಪೂರೈಕೆಯಾಗಿ ಆರೋಗ್ಯ ಸಮಸ್ಯೆಯಾಗದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಈಗಾಗಲೇ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು, ಯಾವುದೇ ಕಾರಣಕ್ಕೂ ಕಲುಷಿತ ನೀರಿನಿಂದ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು.

ರಸಗೊಬ್ಬರ ಮಾರಾಟದ ಮೇಲೆ ನಿರಂತರ ನಿಗಾ ವಹಿಸಿ:

ಹಾವೇರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ ರಸಗೊಬ್ಬರ ಮಾರಾಟವಾಗಿದ್ದು, ಇದಕ್ಕೆ ಕಾರಣವೇನು? ರಸಗೊಬ್ಬರ ಮಾರಾಟದ ಮೇಲೆ ನಿರಂತರ ನಿಗಾ ವಹಿಸಿ, ಅರ್ಹ ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಆದ್ಯತೆ:

ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಆದ್ಯತೆ ನೀಡಬೇಕು. ಪಂಚಾಯತ್ ರಾಜ್ ಮತ್ತು ಇಂಧನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ವಿದ್ಯುತ್ ಸಂಪರ್ಕ ಕಲ್ಪಿಸಲು ಠೇವಣಿಗಾಗಿ ಕಾಯಬಾರದು ಎಂದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon