ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರಪಾಲಿಕೆಗಳಿಗೆ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಜೂನ್ 30 ರೊಳಗಾಗಿ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿದ್ದು, ಈ ಸಂಬಂಧ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಒಟ್ಟು 369 ವಾರ್ಡ್ಗಳಿಗೆ ಅಂತಿಮ ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಏಪ್ರಿಲ್ 16 ರಿಂದ ಮೇ 15 ರವರೆಗೆ ನಡೆಯಲಿರುವ ಜನಗಣತಿ ಕಾರ್ಯ, ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಶೈಕ್ಷಣಿಕ ಪರೀಕ್ಷಾ ಕರ್ತವ್ಯಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸಿರುವುದರಿಂದ, ಚುನಾವಣಾ ಕಾಲಮಿತಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆಯೋಗಕ್ಕೆ ಕೋರಿದ್ದಾರೆ ಎಂದು ತಿಳಿಸಿದೆ.
ಸರ್ಕಾರದ ಈ ಕೋರಿಕೆಯನ್ನು ಆಯೋಗವು ಸರ್ವೋಚ್ಛ ನ್ಯಾಯಾಲಯದ ಗಮನಕ್ಕೆ ತರಲಾಗಿದೆ. ಆದರೆ ಕೇಂದ್ರ ಚುನಾವಣಾ ಆಯೋಗ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಚುನಾವಣೆ ನಡೆಸಲು ಹೆಚ್ಚಿನ ಸಮಯಾವಕಾಶವನ್ನಾಗಲೀ ಅಥವಾ ಚುನಾವಣೆ ಮುಂದೂಡುವ ಬೇಡಿಕೆಯನ್ನಾಗಲೀ ಸಲ್ಲಿಸಿಲ್ಲ ಎಂದಿದೆ.
ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸದ್ಯ ರಾಜ್ಯ ಸರ್ಕಾರಕ್ಕೆ ಕೋರಲಾಗಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ಸಂಪೂರ್ಣವಾಗಿ ರಾಜ್ಯ ಚುನಾವಣಾ ಆಯೋಗ ಸಿದ್ಧವಿದೆ ಎಂದು ಹೇಳಿದೆ.













