ಧಾರವಾಡ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಎಕ್ಸೆಕ್ಯುಟಿವ್ ಎಂಜಿನಿಯರ್ ದೇವರಾಜ ಶಿಗ್ಗಾವಿ ರಿಗೆ ಸೇರಿದ 5 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶನಿವಾರ ಮುಂಜಾನೆಯಿಂದಲೇ ಶಿಗ್ಗಾವಿಯಲ್ಲಿನ ಅವರಿಗೆ ಸೇರಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಕಳಪೆ ಕಾಮಗಾರಿ ನಡೆಸಿರುವ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಈ ಬಗ್ಗೆ ಪ್ರಜಾನೆರಳು ದಿನಪತ್ರಿಕೆಯೊಂದಿಗೆ ಮಾತನಾಡಿದ ಲೋಕಾಯುಕ್ತ ಎಸ್.ಪಿ ಎಸ್.ಟಿ. ಸಿದ್ದಲಿಂಗಪ್ಪ ಅವರು ದಾಳಿಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಎಕ್ಸೆಕ್ಯುಟಿವ್ ಎಂಜಿನಿಯರ್ ದೇವರಾಜ ಶಿಗ್ಗಾವಿ ಇವರು 59 ಕಾಮಗಾರಿಗಳಲ್ಲಿ ಸರಿಯಾಗಿ ಕಾಮಗಾರಿಗಳನ್ನು ನಿರ್ವಹಣೆ ಮಾಡಿಲ್ಲ ಎಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ ಹೇಳಿದರು.
ದೇವರಾಜ ಶಿಗ್ಗಾವಿ ಅವರ ಕಚೇರಿ ಹಾಗೂ 2 ಮನೆ ಸೇರಿದಂತೆ 5 ಸ್ಥಳಗಳಲ್ಲಿ ತನಿಖೆ ನಡೆಯುತ್ತಿದೆ. ಶಿಗ್ಗಾವಿ ಅವರ ಬಾಮೈದನ ಮನೆ ಹಾಗೂ ಪುನೀತ್ ಹೆಗಡೆ ಹೆಸರಿನ ಕಾಂಟ್ರಾಕ್ಟರ್ ಅವರ ಮನೆಗಳ ಮೇಲೆ ದಾಳಿ ನಡೆಸಿ ತನಿಖೆ ನಡೆಸಲಾಗುತ್ತಿದೆ. ಆಡಿಟ್ ರಿಪೋರ್ಟ್ಗಳು, ಥರ್ಡ ಪಾರ್ಟಿ ಇನ್ಸ್ ಪೆಕ್ಷನ್ ರಿಪೋರ್ಟ್ಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.
ತನಿಖಾಧಿಕಾರಿ ಕರುಣೇಶ ಗೌಡ, ಉಸ್ತುವಾರಿ ಡಿ.ಎಸ್.ಪಿ ವೆಂಕನಗೌಡ ಪಾಟೀಲಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮಾಧ್ಯಮಗಳಲ್ಲಿ ಬಂದ ವರದಿಗಳು, ಇಲಾಖೆಗೆ ಬಂದ ದೂರುಗಳನ್ನು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ಮಾಹಿತಿಯನ್ನು ಪಡೆದು, ಅದನ್ನು ಮೇಲಧಿಕಾರಿಗಳಿಗೆ ಕಳುಹಿಸಿ ಅವರ ಅನುಮತಿಯ ನಂತರವೇ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಸ್.ಟಿ. ಸಿದ್ದಲಿಂಗಪ್ಪ ಮಾಹಿತಿ ನೀಡಿದರು.
ಬೆಳಗಾವಿಯ ಸಣ್ಣ ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ:
ಬೆಳಗಾವಿ ಜಿಲ್ಲೆಯಲ್ಲಿ ಕೂಡ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ಜಿಲ್ಲೆಯಲ್ಲಿಯೂ ಇದೇ ರೀತಿಯ ದಾಳಿಗಳನ್ನು ನಡೆಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.














