ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಅನುಮತಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದರು.
ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸೋಮವಾರ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೈಕೋರ್ಟ್ ತೀರ್ಪಿನ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲೇಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.
ಮುಂದೆ ಇದನ್ನು ಹೇಗೆ ಸಂವಿಧಾನದ ಒಂಬತ್ತನೇ ಶೆಡ್ಯೂಲ್ ಅಡಿಯಲ್ಲಿ ತಂದು ಶಾಶ್ವತ ರಕ್ಷಣೆ ಒದಗಿಸಬೇಕು ಅನ್ನೋದರ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಮೀಸಲಾತಿ ಹೆಚ್ಚಳಕ್ಕೆ ಶಾಶ್ವತ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.
ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಸರ್ಕಾರ ಬದ್ಧ:
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ಅನೇಕ ಗೊಂದಲಗಳಿರುವುದು ನಿಜ. ಈ ಹಿಂದೆ ಹೆಚ್. ಆಂಜನೇಯ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಮುಕ್ತವಾಗಿ ಅನುದಾನ ನೀಡುತ್ತಿದ್ದರು. ಸ್ವಾಮೀಜಿಯವರು 5 ಕೋಟಿ ಅನುದಾನ ಕೇಳಿದಾಗ ಅದನ್ನು ಮಂಜೂರು ಮಾಡಿದ್ದರು. ಈಗ ಎಲ್ಲ ಇಲಾಖೆಗಳಲ್ಲಿಯೂ ಶೇ.17ರಷ್ಟು ಅನುದಾನವನ್ನು ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಡಬೇಕೆಂಬ ನಿಯಮವಿದೆ. ಈ ಅನುದಾನವನ್ನು ಸಮುದಾಯಗಳ ಅಭಿವೃದ್ಧಿಗೆ ಬಳಸಲಾಗಿದೆ. ಗಂಗಾಕಲ್ಯಾಣ ಯೋಜನೆಯಡಿ ಸಾವಿರಾರು ಫಲಾನುಭವಿಗಳಿಗೆ ಕೊಳವೆಬಾವಿ ಸೌಲಭ್ಯ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ 162 ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ವಾಲ್ಮೀಕಿ ನಿಗಮದಲ್ಲಿ ರಾಜಕೀಯ ಕಾರಣಕ್ಕೆ ಗೊಂದಲ:
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ರಾಜಕೀಯ ಕಾರಣಗಳಿಗಾಗಿ ಗೊಂದಲ ಸೃಷ್ಟಿಸಲಾಯಿತು. ಇದರಿಂದ ಯಾರಿಗೂ ತೊಂದರೆಯಾಗಿಲ್ಲ. ಆ ಸಂದರ್ಭದಲ್ಲಿ ನಾನೇ ಗೃಹ ಸಚಿವನಾಗಿದ್ದೆ. ಆರೋಪಕ್ಕೆ ಸಂಬಂಧಿಸಿದಂತೆ ಉಲ್ಲೇಖಿಸಲಾಗಿದ್ದ ಎಲ್ಲ ಹಣವೂ ವಾಪಸ್ ಬಂದಿದೆ ಎಂದು ಹೇಳಿದರು.














