ಹಾವೇರಿ: ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅತಿಯಾದ ರಾಜಕಾರಣ ಮಾಡುತ್ತಿದ್ದಾರೆ. 2026ರ ಜನಗಣತಿ ನಂತರ ಕ್ಷೇತ್ರ ಮರುವಿಂಗಡಣೆಯಾದರೆ ದಕ್ಷಿಣದ ರಾಜ್ಯಗಳಿಗೆ ದೊಡ್ಡ ಮಟ್ಟದ ನಷ್ಟ ಉಂಟಾಗುತ್ತದೆ. ಕರ್ನಾಟಕದಲ್ಲಿ ಎರಡು ಸ್ಥಾನ ಕಡಿಮೆಯಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.
ಸೋಮವಾರ ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ಕೇಂದ್ರ ಸರ್ಕಾರ ಮಾಡಲು ಹೊರಟಿರುವ ಕ್ಷೇತ್ರ ಮರುವಿಂಗಡಣೆಯಲ್ಲಿ ಕರ್ನಾಟಕಕ್ಕೆ ಹೆಚ್ಚುವರಿಯಾಗಿ 14 ಸ್ಥಾನಗಳು ದೊರೆಯಲಿವೆ. ಕಾಂಗ್ರೆಸ್ನವರು ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡುತ್ತಿದ್ದಾರೆ. ಅವರಿಗೆ ಶೀಘ್ರವೇ ಇದರ ಅರಿವಾಗುತ್ತದೆ. ಪ್ರತಿ ರಾಜ್ಯದಲ್ಲಿ ಸರಾಸರಿ ಶೇ 50 ರಷ್ಟು ಸ್ಥಾನ ಹೆಚ್ಚಳ ಮಾಡುವ ಒಳ್ಳೆಯ ಅವಕಾಶವನ್ನು ಅವರು ಕಳೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಕರ್ನಾಟಕ ಮತ್ತು ದಕ್ಷಿಣ ಭಾರತದ ಜನತೆಯ ಹಿತಾಸಕ್ತಿಯ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಳೆದ ಮೂವತ್ತು ವರ್ಷಗಳಿಂದ ಮಹಿಳಾ ಮೀಸಲಾತಿ ವಿಧೇಯಕವನ್ನು ಅಂಗೀಕರಿಸದೇ ಮಹಿಳೆಯರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿದುಕೊಳ್ಳಬೇಕು. ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವಧಿಯಲ್ಲಿ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತ ಹೊಂದಿದ್ದರು. ಅವರಿಗೆ ಅಷ್ಟೊಂದು ಆಸಕ್ತಿ ಇದ್ದಿದ್ದರೆ ಅವರು ಮಹಿಳಾ ಮೀಸಲಾತಿ ವಿಧೇಯಕ ಅಂಗೀಕರಿಸಬಹುದಿತ್ತು. ಅವರೇಕೆ ಅಂಗೀಕರಿಸಲಿಲ್ಲ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ನವರು ಪ್ರಧಾನಿ ನರೇಂದ್ರ ಮೋದಿಯವರು 30 ತಿಂಗಳು ಯಾಕೆ ಮಹಿಳಾ ವಿಧೇಯಕ ಜಾರಿ ಮಾಡಲಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಶ್ರಮದಿಂದ 2023 ರಲ್ಲಿ ಸರ್ವಾನುಮತದಿಂದ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕರಿಸಲಾಗಿತ್ತು. ಕಾಂಗ್ರೆಸ್ನವರು 30 ವರ್ಷದಿಂದ ಯಾಕೆ ಮಾಡಲಿಲ್ಲ ಎಂದು ಅವರು ಮೊದಲು ಉತ್ತರಿಸಲಿ ಎಂದು ಬಸವರಾಜ್ ಬೊಮ್ಮಾಯಿ ಸವಾಲು ಹಾಕಿದರು.














