ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕೌಶಲ್ಯ ಮಿಷನ್ ನೇತೃತ್ವದಲ್ಲಿ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜೊತೆಗೆ ಬೆಂಗಳೂರಿನ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ ಮಾಹಿತಿ ನೀಡಿದ್ದಾರೆ.
ಬುಧವಾರ ಉದ್ಯೋಗ ಮೇಳದ ಕುರಿತು ಮಾತನಾಡಿರುವ ಅವರು, ನೆಹರು ನಗರದಲ್ಲಿನ ಸ್‌ಜಿ ಬಾಳೆಕುಂದ್ರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉದ್ಯೋಗ ಮೇಳದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ 7ರಂದು ನಡೆಯಲಿರುವ ಕಾರ್ಯಕ್ರಮವನ್ನು ಬೆಳಗಾವಿಯ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆ ಆಯೋಜಿಸಿದೆ. ಬೆಳಗಾವಿ, ಹುಬ್ಬಳ್ಳಿ, ಬೆಂಗಳೂರು ನಗರಗಳಿಂದ 100ಕ್ಕೂ ಹೆಚ್ಚು ವಿವಿಧ ಉದ್ಯೋಗದಾತ ಕಂಪನಿಗಳು ಭಾಗವಹಿಸುತ್ತಿದ್ದು, ಈ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಎಲ್ಲ ನಿರುದ್ಯೋಗಿ ಯುವಕ-ಯುವತಿಯರು ಪಾಲ್ಗೊಳ್ಳಬಹುದಾಗಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಯಾವುದೇ ಪದವಿ, ಡಿಪ್ಲೊಮೊ, ಸ್ನಾತಕೋತ್ತರ ಪದವೀಧರರು ಕೂಡ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆಯಬಹುದಾಗಿದೆ ಎಂದು ವಿವರಿಸಿದ್ದಾರೆ.















