ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಏ.18ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ.
ಪುನರಾವರ್ತಿತ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆ ಏ.17ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು, ಆದರೆ ಇದೀಗ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಒಂದು ದಿನ ಹೆಚ್ಚಿನ ಕಾಲಾವಕಾಶ ನೀಡಲಾಗಿದೆ.
ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭವಾಗಲಿದ್ದು, ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅಥವಾ ಸಂಬಂಧಪಟ್ಟ ಕಾಲೇಜುಗಳಿಗೆ ಭೇಟಿ ನೀಡಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅವಧಿ ವಿಸ್ತರಣೆಯ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.















