ಮಂಗಳೂರು: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪಗಳನ್ನು ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುದೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.
ಮೂಡುಬಿದಿರೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತ ಆರೋಪಿಯ ಪತ್ನಿಯು ಠಾಣೆಯ ಇನ್ ಸ್ಪೆಕ್ಟರ್ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸಿ ಪ್ರಾಥಮಿಕ ವರದಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಉತ್ತರ ಉಪವಿಭಾಗ (ಪಣಂಬೂರು)ದ ಎಸಿಪಿಗೆ ಸೂಚಿಸಿದ್ದರು.
ಎಸಿಪಿ ಅವರು ಪ್ರಾಥಮಿಕ ತನಿಖೆಯನ್ನು ನಡೆಸಿ ಪೊಲೀಸ್ ಆಯುಕ್ತರಿಗೆ ವರದಿ ನೀಡಿರುವ ಹಿನ್ನಲೆಯಲ್ಲಿ ಈ ಆದೇಶ ಹೊರಬಿದ್ದಿದೆ.















