ಬೆಂಗಳೂರು: ನಮ್ಮನ್ನು ಈ ಜಗತ್ತಿಗೆ ಪರಿಚಯಿಸಿ ಬೆಳೆಸಿದ ಸಮಾಜದ ಸೇವೆ ಮಾಡುವ, ಋಣ ತೀರಿಸುವುದೇ ಪ್ರತಿಯೊಬ್ಬ ಮನುಷ್ಯನ ಮುಖ್ಯ ಧ್ಯೇಯ ಆಗಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ, ಮಾಜಿ ಸಚಿವ ಡಾ.ಪಿ.ಜಿ.ಆರ್.ಸಿಂಧ್ಯಾ ಪ್ರತಿಪಾದಿಸಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಲೋಕಭವನದಲ್ಲಿ ಆಯೋಜಿಸಿದ್ದ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವ ಗುಣ ಮತ್ತು ಸಮಾಜ ಸೇವೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಮಹತ್ವದ ಪಾತ್ರ ವಹಿಸುತ್ತಿದೆ. ದೈಹಿಕ, ಮಾನಸಿಕ ಮತ್ತು ನೈತಿಕ ಶಿಸ್ತನ್ನು ಮೂಡಿಸಿ, ಅವರನ್ನು ದೇಶದ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುತ್ತಿದೆ ಎಂದು ಹೇಳಿದರು.
ಸಂಸ್ಥೆ ಸದಾ ಸಿದ್ಧರಾಗಿರಿ ಎಂಬ ಧ್ಯೇಯವಾಕ್ಯದೊಂದಿಗೆ ಯುವಜನರಲ್ಲಿ ನಿಸ್ವಾರ್ಥ ಸೇವಾ ಮನೋಭಾವ ಮತ್ತು ಪರಿಸರ ಜಾಗೃತಿ ಬೆಳೆಸುತ್ತಿದೆ. ಶಾಲಾ ಹಂತದಲ್ಲೇ ಮಕ್ಕಳಲ್ಲಿ ನಾಯಕತ್ವ ಗುಣ, ಸೋದರಭಾವ ಮತ್ತು ಧೈರ್ಯವನ್ನು ತುಂಬುವ ಮೂಲಕ ಅವರ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕುತ್ತಿದೆ. ಇದು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅತ್ಯಗತ್ಯ ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್, ಸಂಸ್ಥೆಯ ಉಪಾಧ್ಯಕ್ಷ ಕೊಂಡಜ್ಜಿ ಬಿ. ಷಣ್ಮುಗಪ್ಪ, ಎ.ಎನ್. ಮಹೇಶ್, ಆಶಾ ಪ್ರಸನ್ನ ಕುಮಾರ್, ಗಜಾನನ ಮನ್ನಿಕೇರಿ, ರಾಜ್ಯ ಆಯುಕ್ತರಾದ ಚಿನ್ನಸ್ವಾಮಿ ರೆಡ್ಡಿ, ಗೀತಾ ನಟರಾಜ್ ಸೇರಿದಂತೆ ರಾಜ್ಯದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾಗಿದ್ದ ಅರ್ಹ ಸ್ಕೌಟ್ಸ್, ಗೈಡ್ಸ್, ರೋವರ್ಸ್ ಹಾಗೂ ರೇಂಜರ್ಸ್ಗಳಿಗೆ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರಗಳನ್ನು ಪ್ರದಾನ ಮಾಡಲಾಯಿತು.















